ಡಿಕೆ ಶಿವಕುಮಾರ್ ಬಾಯಲ್ಲಿ ಸಂವಿಧಾನ ಬದಲಾವಣೆ ಮಾತು: ಪೇಚಿಗೆ ಸಿಲುಕಿದ ಹೈಕಮಾಂಡ್
- Ananthamurthy m Hegde
- Mar 24
- 1 min read
ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುವ ವಿಚಾರವಾಗಿ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅಲ್ಪಸಂಖ್ಯಾತರಿಗೆ ಕೋಟಾ ನೀಡಲು ಸಂವಿಧಾನದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗುವುದು ಎಂಬ ಹೇಳಿಕೆ ಇದೀಗ ವಿವಾದವನ್ನು ಹುಟ್ಟುಹಾಕಿದೆ.

ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಡಿಸಿಎಂ ಡಿಕೆ ಶಿವಕುಮಾರ್ ಬಳಿ ವಿವರಣೆ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ. ಇನ್ನು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು, ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ವರದಿಯಾಗಿದೆ.
ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾಗಿದ್ದು. ಈ ಬಗ್ಗೆ ರಾಜ್ಯಸಭೆಯಲ್ಲಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂವಿಧಾನ ಬದಲಿಸುವ ಬಗ್ಗೆ ನಾನು ಮಾತನಾಡಲಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಂವಿಧಾನ ಬದಲಾವಣೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ನಾನು ಹಾಗೆ ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ.
ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ನಮ್ಮದು ರಾಷ್ಟ್ರೀಯ ಪಕ್ಷ, ಸಂವಿಧಾನವನ್ನು ಜಾರಿಗೆ ತಂದಿದ್ದೇ ನಮ್ಮ ಪಕ್ಷ. ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ನಮಗೆ ಚೆನ್ನಾಗಿ ಗೊತ್ತಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ವಿಫಲವಾಗಿದೆ. ಬಜೆಟ್ ನಲ್ಲಿ ಏನೂ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಈ ರೀತಿ ಇಲ್ಲಸಲ್ಲದ ವಿಚಾರವನ್ನು ಪ್ರಸ್ತಾವ ಮಾಡುತ್ತಿದೆ. ಇದೊಂದು ನನ್ನ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂದುವರೆದಿರುವ ರಾಜಕೀಯ ಪಿತೂರಿ ಎಂದು ಹೇಳಿದ್ದಾರೆ.
Komentar